ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಎಂಎಲ್‌ಸಿ ಸಿಟಿ ರವಿ ಅವಾಚ್ಯ ಪದ ಬಳಕೆ ಆರೋಪ ಸಂಬಂಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಆಗ್ರಹಿಸಿದೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಸಿಟಿ ರವಿಯವರ ವಿರುದ್ಧ ಉನ್ನತ ತನಿಖೆ ನಡೆಸುವಂತೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಪತ್ರ ಬರೆದಿದ್ದಾರೆ.
ಡಿ.19ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪರಿಷತ್ತಿನ ಸದಸ್ಯ ಸಿ.ಟಿ.ರವಿ ಅವರು ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿರುವ ಬಗ್ಗೆ ವರದಿಯಾಗಿತ್ತು. ಈ ಬೆನ್ನಲ್ಲೆ ಹೊರಟ್ಟಿಯವರಿಗೆ ಪತ್ರ ಬರೆದಿರುವ ಡಾ.ನಾಗಲಕ್ಷ್ಮಿ ಚೌಧರಿಯವರು, ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೇ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರ ವಿರುದ್ಧ ಅತೀ ಕೀಳುಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದಾರೆ. ಇದು ನಾಡಿನ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ ಮಾಡಿರುವ ಅಪಮಾನವಾಗಿದೆ. ಆದ್ದರಿಂದ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮನವಿ ಮಾಡಿದ್ದಾರೆ.