ಬೆಂಗಳೂರು: ಡೀಪ್ ಫೇಕ್ ನಿಂದ ದಿನೆ ದಿನೆ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ವಂಚಕರು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಹೆಸರಿನಲ್ಲಿ ಡೀಪ್ ಫೇಕ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಷೇರು ಹೂಡಿಕೆ ನೆಪದಲ್ಲಿ ಅಧಿಕ ಲಾಭದ ಆಸೆ ತೋರಿಸಿ ಮಹಿಳೆಯೊಬ್ಬರಿಂದ ಬರೋಬ್ಬರಿ 67.11 ಲಕ್ಷ ವರ್ಗಾಯಿಸಿ ಕೊಂಡು ಅನಂತರ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬನಶಂಕರಿ ಎರಡನೇ ಹಂತದ ಕೆ.ಜಿ.ವೀಣಾ ಅವರು ವಂಚನೆಗೆ ಒಳಗಾದ ಮಹಿಳೆ. ಇವರು ನೀಡಿದ ದೂರಿನ ಮೇರೆಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಅಪರಿಚಿತರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.