ಕರ್ನಾಟಕ

ನಾನು ಯಾವ ಪಿತೂರಿ-ಷಡ್ಯಂತ್ರಕ್ಕೂ ಭಯ ಪಡುವವನಲ್ಲ; BJP-JDSಗೆ ಸಿಎಂ ಎಚ್ಚರಿಕೆ

ನಾನು ಅಸೂಯೆ, ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಮುಖ್ಯಮಂತ್ರಿಯಾಗಿದ್ದೇನೆ ಸಿದ್ದರಾಮಯ್ಯ ಹೇಳಿದರು

ಹಾವೇರಿ: ರಾಣೆಬೆನ್ನೂರು ತಾಲ್ಲೂಕು ದೇವರಗುಡ್ಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕಂಚಿನ ಪುತ್ಥಳಿಯನ್ನ  ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಯಾವುದೇ ರೀತಿಯ ಪಿತೂರಿ-ಷಡ್ಯಂತ್ರಕ್ಕೆ ಭಯ ಪಡುವವನಲ್ಲ ನಾನು. ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ನ ಸೇಡು, ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ನಾನು ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕುವ ಮೂಲಕ ನುಡಿದಂತೆ ನಡೆದಿದ್ದೇನೆ. ಎರಡನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಪಂಚ ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇನೆ ಎಂದರು. 

ನಾನು ಅಸೂಯೆ, ದ್ವೇಷದ ರಾಜಕಾರಣ ಮಾಡುವವರಿಂದ ಅಧಿಕಾರಕ್ಕೆ ಬರಲಿಲ್ಲ. ಜನರ ಆಶೀರ್ವಾದದಿಂದ ಹಿಂದುಳಿದ ಸಮಾಜದ ಸಿದ್ದರಾಮಯ್ಯ ಇಂದು ಮುಖ್ಯಮಂತ್ರಿಯಾಗಿದ್ದೇನೆ. ಜನರ ಆಶೀರ್ವಾದ ಇರುವವರೆಗೂ ನನ್ನನ್ನ ಏನು ಮಾಡಲು ಸಾಧ್ಯವಿಲ್ಲ ಎಂದು ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. 

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ದೊರಕಬೇಕೆಂದು ಮಹಾತ್ಮ ಗಾಂಧಿ ಹೇಳಿದ್ದರು. ಗಾಂಧಿಜೀಯವರ ತತ್ವದಲ್ಲಿ ನಂಬಿಕೆ ಇಟ್ಟು ಕಾರ್ಯಕ್ರಮ ರೂಪಿಸಿದ್ದೇನೆ. ಆದರೆ ಈ ಬಿಜೆಪಿ-ಜೆಡಿಎಸ್ ನವರಿಗೆ ಹೊಟ್ಟೆಕಿಚ್ಚು. ಆ ಕಿಚ್ಚಿನಿಂದ ಅವರೇ ನಾಶವಾಗಿ ಹೋಗುತ್ತಾರೆ ಹೊರತು ನನ್ನನ್ನ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಎಚ್ಚರಿಕೆ ನೀಡಿದರು.  

.