ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಸಂಕಷ್ಟ ಎದುರಾಗಿದೆ. ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆಂದು ಆರೋಪಿಸಿ ಸಲ್ಲಿಸಿದ್ದ, ತಕರಾರು ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಈ ತಕರಾರು ಅರ್ಜಿಯನ್ನು ದಾವಣಗೆರೆ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಜಿ.ಎಸ್ ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆಯ ಸುಭಾನ್ ಖಾನ್ ಸಲ್ಲಿಸಿದ್ದರು.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿದ್ದಲ್ಲದೆ, ಮಹಿಳೆಯರಿಗೆ 1 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದರು. ಇದು ಪ್ರಜಾಪ್ರತಿನಿಧಿ ಕಾಯಿದೆಗೆ ವಿರುದ್ಧವಾಗಿದೆ, ಮತದಾರರಿಗೆ ಲಂಚದ ಆಮಿಷ ಒಡ್ಡಿದ್ದಾರೆ ಮತ್ತು ಚುನಾವಣಾ ಅಕ್ರಮಗಳನ್ನು ನಡೆಸಿ ಅವರು ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರ ಆಯ್ಕೆ ಅಸಿಂಧುವೆಂದು ಘೋಷಿಸಲು ಅರ್ಜಿದಾರರು ಮನವಿ ಮಾಡಿದ್ದಾರೆ. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟಂಬರ್ 19 ಕ್ಕೆ ಮುಂದೂಡಿದೆ.