ಮುಂಬೈ: ಐಪಿಎಲ್ 2025ರ ಸೀಸನ್ ಆರಂಭವಾಗಲು ಇನ್ನು ಕೆಲವೇ ತಿಂಗಳು ಬಾಕಿ ಇದೆ. ಜತೆಗೆ ಈಗಾಗಲೇ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯೂ ಮುಗಿದೆ. ಆದರೆ ಇದೇ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್‌ಗೆ ಆಘಾತ ಎದುರಾಗಿದ್ದು ನಾಯಕ ಹಾರ್ದಿಕ್ ಪಾಂಡ್ಯ ಸೀಸನ್‌ನ ಮೊದಲ ಪಂದ್ಯದಲ್ಲಿ ಆಡುವಂತಿಲ್ಲ.
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಣಕ್ಕಿಳಿದಿದ್ದ ಮುಂಬೈ ತಂಡ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು. ಆ ಪಂದ್ಯ ಕಳೆದ ಆವೃತ್ತಿಯಲ್ಲಿ ಮುಂಬೈನ ಕೊನೆಯ ಪಂದ್ಯವಾಗಿತ್ತು. ಹಾಗಾಗಿ ಪಾಂಡ್ಯ ನಿಷೇಧದ ಶಿಕ್ಷೆ ಈ ಬಾರಿಯ ಐಪಿಎಲ್ನಲ್ಲಿ ಮುಂದುವರೆಯಲಿದೆ. ಅದರಂತೆ ಐಪಿಎಲ್ 2025 ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಪರ ಮೊದಲ ಪಂದ್ಯವಾಡಲು ಸಾಧ್ಯವಾಗುವುದಿಲ್ಲ.
ಸ್ಲೋ ಓವರ್ ರೇಟ್ ನಿಯಮದ ಪ್ರಕಾರ ಮೊದಲ ತಪ್ಪಿಗೆ ನಾಯಕನನ್ನು ದೋಷಿಯನ್ನಾಗಿ ಮಾಡಲಾಗುತ್ತದೆ. ಮೊದಲ ಬಾರಿಯ ತಪ್ಪಿಗೆ 12 ಲಕ್ಷ ರೂ. ದಂಡ ಹಾಕಲಾಗುತ್ತದೆ. ಇದು ಪುನರಾವರ್ತನೆಯಾದಲ್ಲಿ 24 ಲಕ್ಷ ರೂ. ದಂಡ ನಿಗದಿ ಮಾಡಲಾಗಿದೆ. ಅಲ್ಲದೆ ತಂಡದ ಇತರೆ ಆಟಗಾರರು ಪಂದ್ಯದ ಶುಲ್ಕದ ಶೇ.25 ರಷ್ಟು ಮೊತ್ತವನ್ನು ದಂಡವಾಗಿ ನೀಡಬೇಕು. ಒಂದೊಮ್ಮೆ ಮೂರನೇ ಬಾರಿ ಮತ್ತೆ ಇದೇ ತಪ್ಪು ಮರುಕಳಿಸಿದರೆ ಆಗ ನಾಯಕ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಬೇಕಾಗುತ್ತದೆ.